Bengaluru: ಇಂತಹ ಸ್ಥಳದಲ್ಲಿ ಸಿಸಿಟಿವಿ ಕಡ್ಡಾಯ! ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಏನಿದೆ?

Bengaluru: ಬೆಂಗಳೂರು (Bengaluru) ನಗರದ ಕೋರಮಂಗಲ ಪಿಜಿಯಲ್ಲಿ (Koramangala PG) ಯುವತಿ ಹತ್ಯೆ ಬೆನ್ನಲ್ಲೆ ಪಿಜಿಗಳಿಗೆ ಬಿಬಿಎಂಪಿ (BBMP) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ಮಂಜುರಾತಿ/ನವೀಕರಣ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ (Paying Guests) ಮತ್ತು ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಪಿಜಿಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಸೂಚಿಸಲಾಗಿದೆ.

ಮಾರ್ಗಸೂಚಿಗಳು:

1. ಪೇಯಿಂಗ್ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ಕಡ್ಡಾಯ. ಪ್ರತಿಯೊಂದು ಸಿಸಿ ಟಿವಿ ಕ್ಯಾಮೆರಾದ (CCTV) ವೀಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್‌ ವೇರ್ ಮತ್ತು ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜ್‌ನ್ನು ಇಟ್ಟುಕೊಳ್ಳುವುದು ಕಡ್ಡಾಯ.

2. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಬೇಕು.

3. ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು.

4. ಪೇಯಿಂಗ್ ಗೆಸ್ಟ್‌ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬ ನಿವಾಸಿಗೆ 135 LPCD ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳಬೇಕು.

5. ಪೇಯಿಂಗ್ ಗೆಸ್ಟ್‌ ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ FSSAI ಇಲಾಖೆಯಿಂದ ಲೈಸನ್ಸ್‌ನ್ನು ಪಡೆದುಕೊಳ್ಳಬೇಕು.

6. ಉದ್ದಿಮೆದಾರರು/ಮಾಲೀಕರು ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ ಓರ್ವ ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಬೇಕು.

7. ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡಿರಬೇಕು.

8. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿಕೊಳ್ಳಬೇಕು.

9. ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ(First Aid Kits)ಗಳನ್ನು ಇಟ್ಟುಕೊಂಡಿರಬೇಕು.

10. ಪೇಯಿಂಗ್ ಗೆಸ್ಟ್‌ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿ ಮಾಡಬೇಕು.

Leave A Reply

Your email address will not be published.