Karnataka Politics: ಮುಖ್ಯಮಂತ್ರಿ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಅನುಮತಿ – ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

Share the Article

Karnataka Politics: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ(B Y Vijayendra) ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು. ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಯವರು ರಾಜೀನಾಮೆ ಕೊಟ್ಟು ಕಾನೂನು ಎದುರಿಸಬೇಕಿದೆ ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್ ನೀಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ರಾಜ್ಯಪಾಲರು ಕಾನೂನಿನಂತೆ ಕ್ರಮ4 ಕೈಗೊಳ್ಳುವಂಥವರು. ನೆಲದ ಕಾನೂನು ಇದೆ. ಭ್ರಷ್ಟಾಚಾರ ತಡೆ ಕಾನೂನಿನಡಿ ಅವರು ಕ್ರಮ ಕೈಗೊಂಡಿದ್ದಾರೆ. ಅಬ್ರಹಂ, ಕೃಷ್ಣ ಅವರ ದೂರಿನ ಕುರಿತು ವರದಿ ತರಿಸಿಕೊಂಡು ತಜ್ಞರ ಜೊತೆ ಚರ್ಚಿಸಿ ಅವರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಲ್ಪವಾದರೂ ಆತ್ಮಸಾಕ್ಷಿ, ನೈತಿಕತೆ, ಮೌಲ್ಯ, ಸಂವಿಧಾನಕ್ಕೆ ನಿಷ್ಠೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಗ್ರಹವನ್ನು ಮುಂದಿಟ್ಟರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ವಾಲ್ಮೀಕಿ ನಿಗಮ, ಮುಡಾ ಹಗರಣ ಸೇರಿ ಎರಡು ಹಗರಣಗಳಲ್ಲಿ ಅಧಿಕಾರ ದುರ್ಬಳಕೆ ಆಗಿರುವುದು ಸ್ಪಷ್ಟವಾಗಿ ಗೋಚರಿಸಿದೆ ಎಂದು ಅವರು ನುಡಿದರು.

Leave A Reply