Harish Poonja: ಪೋಲೀಸರಿಗೆ ನಿಂದನೆ, ಬೆದರಿಕೆ ಆರೋಪ – ಹರೀಶ್ ಪೂಂಜ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್

Harish Poonja: ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸಲಾಗುತ್ತಿದೆ’ ಎಂಬ ಆರೋಪದಡಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪೊಲೀಸರ ಕ್ರಮವನ್ನು ಆಕ್ಷೇಪಿಸಿ ಠಾಣೆಗೆ ಧಾವಿಸಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ(MLA Harish Poonja) ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿರುವ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.

 

ಕೆಲವು ತಿಂಗಳ ಹಿಂದೆ ದ. ಕ ಜಿಲ್ಲೆಯ ಬೆಳ್ತಂಗಡಿಯಲ್ಲಿ(Belthangady)ನಡೆದ ಭಾರೀ ಹೈಡ್ರಾಮದ ಬಗ್ಗೆ ಎಲ್ಲರಿಗೂ ತಿಳಿದಿದೆ. ಪೋಲಿಸರನ್ನು ನಿಂಧಿಸಿದರೂ ಬಂಧನವಾಗದ ಶಾಸಕರು ಇದೀಗ ಮತ್ತೆ ರಿಲೀಫ್ ಆಗಿದ್ದಾರೆ. ಹೌದು ಪೋಲೀಸರ ನಿಂದನೆ ವಿಚಾರದಲ್ಲಿ ನನ್ನ ತಪ್ಪಿಲ್ಲ, ಹೀಗಾಗಿ ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿತು. ಅಂತೆಯೇ, ವಿಚಾರಣೆಗೆ ಖುದ್ದು ಹಾಜರಾತಿಯಿಂದ ಅರ್ಜಿದಾರರಿಗೆ ವಿನಾಯಿತಿ ನೀಡಿ ಇದೇ 1ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದ್ದಾರೆ.

ಪೂಂಜ ಪರ ವಕೀಲರ ವಾದ ಏನು?
ಪೂಂಜ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಅವರು, ‘ನೋಟಿಸ್ ನೀಡದೆ ಪೊಲೀಸರು ಕ್ರಮಕ್ಕೆ ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಯಾಗಿ ಅರ್ಜಿದಾರರು ಠಾಣೆಗೆ ಹೋಗಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಅವರು ಪೊಲೀಸರ ಕರ್ತವ್ಯಕ್ಕೆ ಎಲ್ಲೂ ಅಡ್ಡಿಪಡಿಸಿಲ್ಲ ಮತ್ತು ಕಾನೂನು ಕೈಗೆತ್ತಿಕೊಂಡಿಲ್ಲ’ ಎಂದು ವಿವರಿಸಿದರು.

ಸರ್ಕಾರದ ಪರ ವಕೀಲರ ವಾದ ಏನು?
ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ವಾದಿಸಿ ‘ಅರ್ಜಿದಾರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಯಬೇಕು. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬಾರದು’ ಎಂದು ಪ್ರತಿಪಾದಿಸಿದರು.

ಏನಿದು ಪ್ರಕರಣ?
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಡಿ ಶಶಿರಾಜ್ ಶೆಟ್ಟಿ ಎಂಬುವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ್ದರು. ‘ಹರೀಶ್‌ ಪೂಂಜಾ, ಪೊಲೀಸ್ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ’ ಎಂದು ಆರೋಪಿಸಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು.

Leave A Reply

Your email address will not be published.