Parvati Siddaramaiah: ಮುಡಾ ಹಗರಣ ವಿಚಾರ- ಇಡಿ ಎಂಟ್ರಿ ಕೊಡುತ್ತಿದ್ದಂತೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಸಿದ್ದರಾಮಯ್ಯ ಪತ್ನಿ ಪಾರ್ವತಿ !!
Parvati Siddaramaiah: ಏನೂ ಆಗಲ್ಲ, ಏನೂ ಆಗಲ್ಲ, ಬರೀ ಎರಡು ತಿಂಗಳು ಹದರಿಸುತ್ತಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಮುಡಾ ಪ್ರಕರಣ ಸೋಮವಾರ ವಿಚಿತ್ರ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದೆ. ಈ ಬೆನ್ನಲ್ಲೇ ಇತ್ತ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ(Parvati Siddaramaiah) ಅವರು ಮುಡಾ ಸೈಟ್(Muda Site) ಗಳನ್ನು ವಾಪಸ್ ಮಾಡಲು ತೀರ್ಮಾನಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಅವರು ತಮಗೆ ಹಂಚಿಕೆ ಮಾಡಲಾದ ಎಲ್ಲಾ 14 ಸೈಟ್ಗಳನ್ನು ಹಿಂದಿರುಗಿಸುತ್ತಿರುವುದಾಗಿ ಹೇಳಿದ್ದಾರೆ.
ಹೌದು, ಜಾರಿ ನಿರ್ದೇಶನಾಲಯ(ED) ಸಿಎಂ ಸಿದ್ದರಾಮಯ್ಯ(CM Siddaramaiah)ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯನವರ ಪತ್ನಿ ಅಚ್ಚರಿಯ ನಿರ್ಧಾರ ತೆಗೆದುಕೊಂಡು, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ಮುಡಾಗೆ ಪತ್ರ ಬರೆದಿರುವ ಸಿಎಂ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಹಾಗಾದ್ರೆ ಸಿಎಂ ಪತ್ನಿ ಬರೆದಿರುವ ಪತ್ರದಲ್ಲಿ ಏನಿದೆ?.
ಪಾರ್ವತಿ ಅವರು ಬರೆದ ಪತ್ರದಲ್ಲಿ ಏನಿದೆ?
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.
ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬ್ತು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.
ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಅಲ್ಲದೆ ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ ? ಎಂದು ಯಾರಾದರೂ ಕೇಳಬಹುದು . ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.