Puthuru : ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣ- ಮೊಟೆತ್ತಡ್ಕ ನಿವಾಸಿ ಅಬ್ದುಲ್ ರಹಿಮಾನ್‌ಗೆ 5 ವರ್ಷ ಜೈಲು!!

Putturu: ಸುಮಾರು 9 ವರ್ಷಗಳ ಹಿಂದೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪುತ್ತೂರು ತಾಲ್ಲೂಕಿನ ಮೊಟೆತ್ತಡ್ಕ ನಿವಾಸಿ ಅಬ್ದುಲ್ ರಹಿಮಾನ್‌ಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ‌ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶ ಮಾಡಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು(Putturu) ಮೊಟೆತಡ್ಕದಲ್ಲಿ 2016ರ ನ.18ರಂದು ಅಬ್ದುಲ ರಹಿಮಾನ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯು ನೀಡಿದ ಹೇಳಿಕೆ ಆಧಾರದಲ್ಲಿ ಆತನ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಕೇಸಿನ ವಿಚಾರವಾಗಿ ಕೋರ್ಟಿನ ತೀರ್ಪು ಹೊರಬಿದ್ದಿದೆ.

ಆಗಿನ ಎಸ್.ಐ ವಾಮನ ಎನ್.ಕೆ ಅವರು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಕ್ಕೆ ಅಬ್ದುಲ್ ರಹಿಮಾನ್‌ಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ಪೊಕ್ಸೊ ಕಾಯ್ದೆಯ ಸೆಕ್ಷನ್‌ 10ರಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹ 30ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಕಾರಾಗೃಹ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಅಪರಾಧಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 354(ಎ) ಅಡಿ 3 ವರ್ಷ ಸಾದಾ ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಅಪರಾಧಿಯು 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶ ಮಾಡಿದ್ದಾರೆ. ದಂಡದ ಮೊತ್ತದಲ್ಲಿ ₹ 30ಸಾವಿರವನ್ನು ಸಂತ್ರಸ್ತೆಗೆ ನೀಡಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತೆಗೆ ₹ 50ಸಾವಿರ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

Leave A Reply

Your email address will not be published.