School Holiday: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ (3-12-2024) ರಜೆ ಘೋಷಣೆ
Dakshina Kannada: ಫೆಂಗಲ್ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಉಡುಪಿ, ದಕ್ಷಿಣ ಕನ್ನಡ ಕೊಡಗು ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ಕೆಲವೆಡೆ ಭಾರೀ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಡಿ.3 ರಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ನಾಳೆ (ಮಂಗಳವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಫೆಂಗಲ್ ಚಂಡಮಾರುತದಿಂದ ಕೊಡಗಿನಲ್ಲಿ ಭಾರೀ ಮಳೆ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ 8.30 (ಬೆಳಗ್ಗೆ) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರ ಮಂಗಳವಾರ ಜಿಲ್ಲಾಧಿಕಾರಿ ಇಂಪಶೇಖರ ರಜೆ ಘೋಷಣೆ ಮಾಡಿದ್ದಾರೆ. ಟ್ಯೂಷನ್ ಕೇಂದ್ರಗಳು, ಮದರಸಗಳಿಗೂ ರಜೆ ಇದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಿ.2,3 ರಂದು ದಕ್ಷಿಣ ಕರ್ನಾಟಕ ಕರಾವಳಿಯಲ್ಲಿ ಗಾಳಿ ಅತಿ ವೇಗದಲ್ಲಿ ಬೀಸುವ ಸಾಧ್ಯತೆಯಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.