BJP: ಬಿಜೆಪಿಯಿಂದ ಶಾಸಕರಾದ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ?

BJP: ರಾಜ್ಯ ಬಿಜೆಪಿಗೆ ತನ್ನದೇ ಶಾಸಕರಾದ ಎಸ್ ಟಿ ಸೋಮಶೇಖರ್(S T Somshekar) ಮತ್ತು ಶಿವರಾಮ್ ಹೆಬ್ಬಾರ್(Shivram Hebbar) ಅವರು ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಇವರಿಬ್ಬರೂ ಬಿಜೆಪಿ ಶಾಸಕರಾದರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯ ನಿರ್ಧಾರಗಳನ್ನು ಟೀಕಿಸುತ್ತಾ, ಕಾಂಗ್ರೆಸ್ ಅನ್ನು ಬೆಂಬಲಿಸುತ್ತ ‘ಕೈ’ ಪಾಳಯದ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಅಲ್ಲದೆ ಇದೀಗ ರಾಜ್ಯ ಬಿಜೆಪಿಯು ಈ ಕುರಿತಾಗಿ ಮಹತ್ವದ ನಿರ್ಧಾರವನ್ನು ಮಾಡಿದೆ ಎಂಬುದಾಗಿ ತಿಳಿದು ಬಂದಿದೆ.

ಹೌದು, ಇಷ್ಟು ದಿನ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದ ಕಾಂಗ್ರೆಸ್‌‍ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಬಿಜೆಪಿ ವಿರುದ್ಧವೇ ಟೀಕೆಟಿಪ್ಪಣೆ ಮಾಡುತ್ತಿದ್ದಾರೆ. ಸಾಲದಕ್ಕೆ ಮಾರ್ಚ್‌13ರಂದು ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲೂ ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಭಾಗವಹಿಸಿದ್ದಾರೆ. ಇದರಿಂದ ಕೆಂಡಾಮಂಡಲವಾಗಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಈ ತಿಂಗಳ ಅಂತ್ಯಕ್ಕೆ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ದೃಢ ನಿರ್ಧಾರ ಮಾಡಿದೆ.

ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿ ಚಿಹ್ನೆಯಿಂದ ಯಶವಂತಪುರ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿರುವ ಇಬ್ಬರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ತಮದೇ ಹಾದಿಯಲ್ಲಿ ಹೊರಟಿದ್ದಾರೆ. ಅದರಲ್ಲೂ ಕಾಂಗ್ರೆಸ್‌‍ ಜೊತೆ ಗುರುತಿಸಿಕೊಂಡು ಬಿಜೆಪಿಗೆ ಇರಿಸುಮುರಿಸು ಉಂಟು ಮಾಡುತ್ತಿರುವ ಇಬ್ಬರನ್ನು ತಿಂಗಳಾಂತ್ಯಕ್ಕೆ ಪಕ್ಷದಿಂದಲೇ ಉಚ್ಛಾಟನೆ ಮಾಡಲು ಪಕ್ಷದ ವರಿಷ್ಠರು ಸಮತಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಅವರು ಎಸ್‌‍.ಟಿ. ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಅವರ ಉಚ್ಚಾಟನೆ ಕುರಿತು ಮಾಹಿತಿ ನೀಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Comments are closed.