Chitradurga: ಬಿಜೆಪಿ ಅಧ್ಯಕ್ಷನ ಕೆನ್ನೆಗೆ ಬಾರಿಸಿದ PSI – ವಿಡಿಯೋ ಹಂಚಿಕೊಂಡು ವಿಜಯೇಂದ್ರ ಆಕ್ರೋಶ !!

Chitradurga : ಚಿತ್ರದುರ್ಗ ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ನಾಯಕ ಮತ್ತು ಪಿಎಸ್ಐ ನಡುವೆ ಜಗಳ ನಡೆದಿದ್ದು, ಬಳಿಕ ಪಿಎಸ್ಐ ಬಿಜೆಪಿ ನಾಯಕನಿಗೆ ಕಪಾಳಮೋಕ್ಷ ಮಾಡಿದಂತಹ ಘಟನೆ ಬೆಳಕಿಗೆ ಬಂದಿದೆ.

ಹೌದು, ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವಾಚ್ಯ ಪದ ಬಳಸಿದರು ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಇದನ್ನು ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಮಾರ್ಚ್ 14ರಂದು ತಡರಾತ್ರಿ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ಹನುಮಂತೇಗೌಡ ಮತ್ತು ಅವರ ಬೆಂಬಲಿಗರು ಗುಂಪು ಗುಂಪಾಗಿ ನಿಂತಿದ್ದರು. ರಾತ್ರಿ ಗಸ್ತು ತಿರುಗುತ್ತಿದ್ದ ಸಬ್ ಇನ್ಸ್ ಪೆಕ್ಟರ್ ಗಾದಿಲಿಂಗಪ್ಪ ಅವರು ಗುಂಪನ್ನು ಪ್ರಶ್ನಿಸಿದ್ದಾರೆ. ಹನುಮಂತೇಗೌಡ ಅವರು ಆ ರಾತ್ರಿ ಊಟಕ್ಕೆ ಹೋಟೆಲ್ ಗೆ ಬಂದಿದ್ದರು ಎಂದು ಹೇಳಿದ್ದಾರೆ. ನಂತರ, ಅವರಿಬ್ಬರೂ ಮಾತಿನ ಚಕಮಕಿಗೆ ಇಳಿದು ಇಬ್ಬರೂ ತಾಳ್ಮೆ ಕಳೆದುಕೊಂಡರು ಮತ್ತು ಪರಸ್ಪರ ಹಲ್ಲೆ ನಡೆಸಿದರು ಮತ್ತು ಪರಸ್ಪರ ನಿಂದಿಸಿದ್ದಾರೆ.

ಬಳಿಕ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಂತೇಗೌಡ, ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಪ್ರತಿ ಆರೋಪ ಮಾಡಿದ್ದಾರೆ. ಆ ಬಳಿಕ ಹನುಮಂತೇಗೌಡ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿ ವೈ ವಿಜಯೇಂದ್ರ ಹೇಳಿದ್ದು ಏನು?

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗದಲ್ಲಿ ಮಧುಗಿರಿ ಬಿಜೆಪಿ ಅಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್‌ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಕರ್ನಾಟಕ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರನ್ನು ತಕ್ಷಣ ಅಮಾನತು ಮಾಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

Comments are closed.