Plastic Bottle: ಖಾಲಿ ಪ್ಲಾಸ್ಟಿಕ್ ಬಾಟಲ್ ಗಳಿಗೆ ಬೆಲೆ ಕಟ್ಟಲು ಮುಂದಾದ ರಾಜ್ಯ ಸರ್ಕಾರ !!

Plastic Bottle: ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲೂ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಯಂತ್ರಣ ತೀರ ಕಷ್ಟವೆನಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದ್ದು ಇನ್ನು ಮುಂದೆ ಖಾಲಿ ಬಾಟಲಿಗಳಿಗೂ ಬೆಲೆ ಕಟ್ಟಲು ಮುಂದಾಗಿದೆ.
ಹೌದು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ಅವರು, ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.
ಈ ಕುರಿತು ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದೇನೆ.
ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡುವಂತೆ ಈ ನಿಯಮವನ್ನು ರೂಪಿಸಲಾಗುತ್ತದೆ. ಉತ್ಪಾದಕರ ವಿಸ್ತರಿತ ಜವಾಬ್ದಾರಿ (EPR) ಅಡಿಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳಿಂದ ಪರಿಸರಕ್ಕೆ ಆಗುವ ಪರಿಣಾಮಗಳನ್ನು ನಿರ್ವಹಿಸಬೇಕಾಗಿದೆ. ಈ ಕ್ರಮದಿಂದ ರಸ್ತೆ, ನದಿ, ಕೆರೆ, ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಡೆಯಲು ಸಾಧ್ಯವಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ! ಎಂದು ಬರೆದುಕೊಂಡಿದ್ದಾರೆ.
Comments are closed.