CET Exam: ಏ.16 ಮತ್ತು 17 ರಂದು ಸಿಇಟಿ ಪರೀಕ್ಷೆ; ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

CET Exam: ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ಧತೆ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.
ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯರು/ ಶ್ರುಶ್ರೂಷಕರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
ಸಿಇಟಿ ಪರೀಕ್ಷಾ ದಿನಗಳಂದು ಸಮಯ ಪಾಲನೆಯಿಂದ ಅತಿಮುಖ್ಯವಾಗಿದ್ದು, ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಿಇಟಿ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
Comments are closed.