Karnataka Rain: ಮೇ 20,21 ಕ್ಕೆ ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ! ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

Mangalore/Udupi: ವಾಯುಭಾರ ಕುಸಿತದ ಕಾರಣದಿಂದ ಮೇ 22ರವರೆಗೂ ಗಾಳಿಯಿಂದ ಕೂಡಿದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹಾಗಾಗಿ ಮೇ 20, 21 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಘೋಷಣೆ ಮಾಡಿದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯಲಿದೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳಬಾರದು. ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿದ್ದು, ಬಿರುಸಿನ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಖು. ವಿಪತ್ತು ನಿರ್ವಹಣೆಯ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೂಡಾ ಮೇ 20 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಾಯುಭಾರ ಕುಸಿತದ ಕಾರಣದಿಂದ ಉಡುಪಿ ಜಿಲ್ಲೆಯ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಮೀನುಗಾರಿಕೆಗೆ ಹೋಗುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Comments are closed.