RSS ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರರು ಸಸ್ಪೆಂಡ್ – ಪ್ರಿಯಾಂಕ ಖರ್ಗೆ ಖಡಕ್ ಎಚ್ಚರಿಕೆ

Share the Article

RSS: ರಾಜ್ಯದಲ್ಲಿ ಆರ್ ಎಸ್ ಎಸ್ ಬ್ಯಾನ್ ಮಾಡುವ ವಿಚಾರ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ಮಾಡಿದರೆ, ಒಂದು ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸುವ ವಿಧೇಯಕವನ್ನು ರಾಜ್ಯ ಸರ್ಕಾರ ತರಲು ಚಿಂತನೆ ನಡೆಸಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರಕಾರಿ ನೌಕರರನ್ನು ಅಮಾನತು ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

ಹೌದು, ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಂತಹ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಿಯಮ ಉಲ್ಲಂಘಿಸಿದವರನ್ನು ತಕ್ಷಣವೇ ಅಮಾನತು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

 ಈ ಕುರಿತಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು “ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಧಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಧ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಿದರೂ ಇತ್ತೀಚೆಗಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ನೌಕರರು ಭಾಗಿಯಾಗುವುದನ್ನು ಗಮನಿಸಲಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ತಿಳಿಸಿದ್ದಾರೆ.

 

 ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸರ್ಕಾರಿ ಅಧಿಕಾರಿಗಳ ಕುರಿತು ವರದಿ ಕೇಳಿದ್ದೇನೆ. ಆ ವರದಿ ಬರುತ್ತಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅಮಾನತು (ಸಸ್ಪೆಂಡ್) ಮಾಡುತ್ತೇನೆ. ಈ ವಿಚಾರವನ್ನು ನಾನು ಇವತ್ತಿನ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಆ ನಿಟ್ಟಿನಲ್ಲಿ ನನ್ನ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಇದೇ ವೇಳೆ, ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಆವರಣಗಳಲ್ಲಿ ಇಂತಹ ಸಂಘಟನೆಗಳ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಮಾತನಾಡಿದ ಅವರು, ನಾನು ಯಾವತ್ತೂ ಒಂದೇ ಸಂಸ್ಥೆ (ಆರ್‌ಎಸ್‌ಎಸ್) ಅಂತ ಹೇಳಿಲ್ಲ. ಇಂತಹ ಯಾವುದೇ ಸಂಸ್ಥೆ ಇರಲಿ, ಅವರು ಸರ್ಕಾರಿ ನೌಕರರನ್ನು ಅಥವಾ ಸರ್ಕಾರಿ ಆಸ್ತಿಗಳನ್ನು ದುರ್ಬಳಕೆ ಮಾಡಬಾರದು ಎಂದರು.

Comments are closed.