BS Ydiyurappa: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

Share the Article

B S Ydiyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್​​ ನೀಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.

ಮಾಜಿ ಸಿಎಂ ಬಿಎಸ್‌ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್​​ ಜಾರಿ ಮಾಡಿದೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್​​ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್​​ವೈ ಸುಪ್ರೀಂಕೋರ್ಟ್​​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ವಾದಿಸಿದ ಹಿರಿಯ ವಕೀಲರಾದ ಸಿಧಾರ್ಥ ಲೂಥ್ರಾ ಮತ್ತು ಸಿಧಾರ್ಥ ದಾವೆ ಅವರು, ಹೈಕೋರ್ಟ್​​ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ. ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್​​ ಗಮನಕ್ಕೆ ತಂದಿದ್ದಾರೆ. ಈ ವೇಳೆ, ಹೈಕೋರ್ಟ್​​ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪೀಠ ಪ್ರತಿವಾದಿಗಳನ್ನು ಪ್ರಶ್ನಿಸಿದೆ.

ಏನಿದು ಪ್ರಕರಣ?
ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.

Comments are closed.