ಮೊಟ್ಟೆ ಸೇವನೆಯಿಂದ ಕ್ಯಾನ್ಸರ್‌ ಬರಲ್ಲ, ಇದು ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

Share the Article

ಬೆಳಗಾವಿ: ‘ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆಗಳ ಗುಣಮಟ್ಟದ ಬಗ್ಗೆ ಯಾವುದೇ ಆತಂಕ ಬೇಡ. ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬುದು ಕೇವಲ ವದಂತಿ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿರುವ ಕುರಿತು ವರದಿಯಾಗಿದೆ.

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ಆತಂಕಕಾರಿ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಪೋಷಕರು ಮತ್ತು ಮಕ್ಕಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಬೇಕು’ ಎಂದು ಬಿಜೆಪಿ ಸದಸ್ಯ ಸುನಿಲ್‌ ಕುಮಾರ್‌ ಅವರು ಒತ್ತಾಯಿಸಿದರು.

ಒಂದು ನಿರ್ದಿಷ್ಟ ಕಂಪನಿಯ ಮೊಟ್ಟೆಗಳಲ್ಲಿ ಆ್ಯಂಟಿ ಬಯಾಟಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿತ್ತು. ಈ ಬಗ್ಗೆ ಸಾರ್ವಜನಿಕವಾಗಿ ಆತಂಕ ಎದುರಾದ ತಕ್ಷಣ ನಾವು ಮತ್ತು ಕೇಂದ್ರದ ಫುಡ್ ಸೇಫ್ಟಿ ಇಲಾಖೆ (FSSAI) ಜಾಗೃತಗೊಂಡಿದ್ದೇವೆ. ಈಗಾಗಲೇ ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಸಚಿವರು ಹೇಳಿದರು.

ಕಳೆದ ವರ್ಷ ರಾಜ್ಯಾದ್ಯಂತ ಸುಮಾರು 147 ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿತ್ತು. ಅದರಲ್ಲಿ ಕೇವಲ ಒಂದು ಮಾದರಿ ಮಾತ್ರ ವಿಫಲವಾಗಿದ್ದು, ಉಳಿದ 146 ಮಾದರಿಗಳು ಅತ್ಯುತ್ತಮ ಗುಣಮಟ್ಟದ್ದಾಗಿವೆ. ಸದ್ಯಕ್ಕೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಮೊಟ್ಟೆಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಮೊಟ್ಟೆ ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ಆರೋಗ್ಯಕ್ಕೆ ಒಳ್ಳೆಯದು. ಜನರು ವದಂತಿಗಳಿಗೆ ಕಿವಿಗೊಡಬಾರದು’ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

Comments are closed.