ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ ಕುರಿತು ಶುಕ್ರವಾರ ನಿರ್ಧಾರ | ಲಸಿಕಾ ಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ – ಮುಖ್ಯಮಂತ್ರಿ
ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಮುಂದುವರಿಕೆ ಕುರಿತು ಶುಕ್ರವಾರ ನಡೆಯುವ ಪ್ರಮುಖರ ಸಭೆಯಲ್ಲಿ ನಿರ್ಧರಿಸಲು ಸರ್ಕಾರ ತೀರ್ಮಾನಿಸಿದೆ.
ರಾಜ್ಯಾದ್ಯಂತ ಕೊವಿಡ್ ನಿಯಂತ್ರಣಕ್ಕೆ ಲಿಸಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆಗಾರರನ್ನಾಗಿ ಮಾಡುವುದಾಗಿ ಸಿಎಂ ತಾಕೀತು ಮಾಡಿದ್ದಾರೆ.
ಮಂಗಳವಾರ ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ, ತುಮಕೂರು, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದರು.
ಜಿಲ್ಲೆಗಳಲ್ಲಿ ಸೀತ, ಕೆಮ್ಮು, ಜ್ವರ ಸೇರಿದಂತೆ ಸಾಮಾನ್ಯ ಖಾಯಿಲೆಗಳಿಗೆ ತಪಾಸಣೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಚಿಕಿತ್ಸೆ (ಒಪಿಡಿ) ವ್ಯವಸ್ಥೆಯನ್ನು ಬಲಗೊಳಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಲಸಿಕೆ ಹಾಕಿಸಲು ಹೆಚ್ಚಿನ ಆದ್ಯತೆ ನೀಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವುದರ ಜೊತೆಗೆ ಅವರ ಆರೋಗ್ಯದ ಕಡೆಗೆ ಗಮನ ಹರಿಸಬೇಕು. 15-18 ವರ್ಷದ ಮಕ್ಕಳಿಗೆ ಲಸಿಕೆ ಕಾರ್ಯವನ್ನು ವೇಗವಾಗಿ ಪೂರ್ಣಗೊಳಿಸಬೇಕು. ಮತ್ತು ಚಿಕ್ಕ ಮಕ್ಕಳ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಒಂದು ವೇಳೆ, ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಉಂಟಾದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.