ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಏರ್ಪೋರ್ಟ್ನಲ್ಲಿ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಗಿತ್ತು. ಇದೀಗ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಪಶ್ಚಿಮ ಬಂಗಾಳ ಮೂಲದ ಸುಭಾಷ್ ಗುಪ್ತ.
ಈತ ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ, ಹೀಗಾಗಿ ಸೇಡು ತೀರಿಸಿಕೊಳ್ಳಲೆಂದೇ, ಬೆಳಗಿನ ಜಾವ 3.30ಕ್ಕೆ ಭಾವನ ಹೆಸರು ಹೇಳಿ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಎಂದುಕೊಂಡು ಈ ಕೃತ್ಯ ಎಸಗಿದ್ದಾನೆ. ಆದರೆ ಆತನೇ ಈಗ ಪೊಲೀಸ್ ವಶವಾಗಿದ್ದಾನೆ.
ಅಂದಹಾಗೆ, ಆರೋಪಿ ಸುಭಾಷ್ ಗುಪ್ತ ಈ ಹಿಂದೆ ಏರ್ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದು, ಇದೀಗ ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದ್ದು, ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.