10 ದಿನಗಳ ಅಂತರದಲ್ಲಿ ನಿಮ್ಮ ಕ್ಷೇತ್ರದಲ್ಲೇ ಸರಣಿ ಹತ್ಯೆ | ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಮಿತ್ ಶಾ ಖಡಕ್ ಕ್ಲಾಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣದ ಕುರಿತಂತೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾದ ಸಂದರ್ಭದಲ್ಲಿ, ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳ ಬಗ್ಗೆ ಕಾರಣ ಕೇಳಿದರು. ನಿಮ್ಮದೇ ಲೋಕಸಭಾ ಕ್ಷೇತ್ರದಲ್ಲಿ 10 ದಿನಗಳ ಅಂತರದಲ್ಲಿ 3 ಕೊಲೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಘಟನೆ ತಡೆಯುವಲ್ಲಿ ವಿಫಲರಾಗಿದ್ದೀರಿ ಎಂದು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಂತರ ಸರ್ಕಾರದ ಸಾಧನಾ ಸಮಾವೇಶ ರದ್ದು ಮಾಡಿದ ನಿರ್ಧಾರ, ಕಾರ್ಯಕರ್ತರು ಶೋಕದಲ್ಲಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ. ಹಾಗಾಗಿ, ರಾಜ್ಯ ಘಟಕದ ನಡೆ ಸರಿಯಿದೆ. ಹಾಗಂತ ಸುಮ್ಮನೆ ಕೂರಬಾರದು, ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಮತ್ತಷ್ಟು ಸಕ್ರಿಯರಾಗಬೇಕು ಎಂದು ಸಲಹೆ ನೀಡಿದ್ದಾರೆ.

ಹಿಂದೂಪರ ಸಂಘಟನೆ ಮುಖಂಡರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಜೊತೆಗೆ ಇತರ ಕೋಮಿನ ರಾಜಕೀಯ ಕಾರಣದ ಹತ್ಯೆಗಳನ್ನೂ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Leave A Reply

Your email address will not be published.