‘ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ, ‘ ಸುಳ್ಳೇ ನಿಮ್ಮ ಮನೆದೇವರು ‘ ಸುಳ್ಳಿನ ರಾಮಯ್ಯನವರೇ’ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದು, ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ನೀವು ಜೀವನದಲ್ಲಿ  ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು  ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ  ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ. ಅಧಿಕಾರ ಕೊಟ್ಟ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವ ಸ್ವಯಂಘೋಷಿತ ಮಹಾನಾಯರು ನೀವಲ್ಲವೇ? ಹೆಸರಿನಲ್ಲಿ ‘ರಾಮ’ ಉಂಡ ಮನೆಗೆ ಪಂಗನಾಮ. ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಕಿಡಿಕಾರಿದ್ದಾರೆ.

ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂದರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗಪಡಿಸಲೇ ಚೂರಿ ರಾಮಯ್ಯನವರೇ ಎಂದಿದ್ದಾರೆ.

5 ವರ್ಷದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನಿಮ್ಮಷ್ಟು ಚೂರಿ ಹಾಕಿದ ಸಿ.ಎಂ. ಮತ್ತೊಬ್ಬರಿಲ್ಲ ಎಂಬುದನ್ನು ಬಿಡಿಸಿ ಹೇಳಬೇಕೇ? ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ ಎಂದು ಹೇಳಿದ್ದಾರೆ.

ಈಗಲೂ ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ. ಅಧಿಕಾರಕ್ಕೀಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ.

ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.