ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿ – ಛೀಮಾರಿ ಹಾಕಿದ ಸುಪ್ರೀಂಕೋರ್ಟ್
ಸಂಸ್ಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಸತ್‍ನಲ್ಲಿ ಚರ್ಚೆ ಮಾಡಬೇಕು, ನ್ಯಾಯಾಲಯದಲ್ಲಿ ಅಲ್ಲ. ನಾವು ಏಕೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಬೇಕು, ನಿಮ್ಮ ಪ್ರಚಾರ ನೀಡಬೇಕೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ವಕೀಲ ಕೆ.ಜಿ.ವಂಝಾರ ಈ ಪಿಐಎಲ್ ಸಲ್ಲಿಸಿದ್ದರು. ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಇಂತಹ ಕ್ರಮವು ದೇಶದ ಅಧಿಕೃತ ಭಾಷೆಯಾಗಿ ಇಂಗ್ಲಿಷ್ ಮತ್ತು ಹಿಂದಿಯನ್ನು ಒದಗಿಸುವ ಪ್ರಸ್ತುತ ಸಾಂವಿಧಾನಿಕ ನಿಬಂಧನೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.
ಭಾಷೆಯ ಬದಲಾವಣೆ ಬಗ್ಗೆ ಸಂವಿಧಾನದ ತಿದ್ದುಪಡಿಯಾಗಬೇಕು, ಭಾಷೆಯನ್ನು ಬದಲಿಸಲು ಕೋರ್ಟ್‍ನಿಂದ ಸಾಧ್ಯವಿಲ್ಲ. ಹೀಗಾಗಿ ನಾವು ಈ ಅರ್ಜಿಯನ್ನು ವಿಚಾರಣೆ ನಡೆಸುವುದಿಲ್ಲ. ಅರ್ಜಿ ವಜಾ ಮಾಡುತ್ತಿದ್ದೇವೆ ಎಂದು ನ್ಯಾಯಾಧೀಶರು ಹೇಳಿದರು. ಅಲ್ಲದೇ ಈ ಬಗ್ಗೆ ಮನವಿಗಳಿದ್ದರೆ ವಕೀಲರು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಸ್ವತಂತ್ರವಾಗಿದ್ದಾರೆ ಎಂದು ಹೇಳಿದೆ.