Kerala: ಕೇರಳದಲ್ಲಿ ಭೀಕರ ಭೂಕುಸಿತ, 20ಕ್ಕೂ ಹೆಚ್ಚು ಮಂದಿ ಬಲಿ! ನೂರಾರು ಮಂದಿ ಕಣ್ಮರೆ!
Kerala: ಶಿರೂರು ಬಳಿ ಗುಡ್ಡ ಕುಸಿತದ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ. ಹೌದು, ಕೇರಳದ (Kerala) ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿರುವ ಬಗ್ಗೆ ವರದಿ ಆಗಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಸುಮಾರು 4 ಗಂಟೆಯ ಸುಮಾರಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ದೊಡ್ಡ ಬೆಟ್ಟವೊಂದು ಕುಸಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಸುಮಾರು 100 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪ್ರವಾಹ ಕೂಡ ನಿರ್ಮಾಣವಾಗಿದೆ.
ಸದ್ಯ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) , ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಯುದ್ದೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.
ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಜೊತೆಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನ್ನು ಬಿಡುಗಡೆ ಮಾಡಲಾಗಿದೆ. ಹೆಲಿಕಾಪ್ಟರ್ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ವಯನಾಡ್ನಲ್ಲಿ ಭೂಕುಸಿತದ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಕೇಂದ್ರದಿಂದ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕೇಂದ್ರ ಸಚಿವ ಸುರೇಶ್ ಗೋಪಿ ಅವರೊಂದಿಗೆ ಮಾತನಾಡಿದ್ದಾರೆ.
ಅಲ್ಲದೇ ಪ್ರಧಾನಮಂತ್ರಿ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡರು.