Bangalore: ಮುನಿರತ್ನ ಮೇಲೆ ಮೊಟ್ಟೆ ಎಸೆತ; ಡಿಸಿಎಂ ಮೇಲೆ ಮುನಿರತ್ನ ಆರೋಪ
Bangalore: ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮವೊಂದು ಲಕ್ಷ್ಮೀದೇವಿ ನಗರ ವಾರ್ಡ್‌ನ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿತ್ತು. ಅಲ್ಲಿಗೆ ಹೋಗುವ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ.
ಮುನಿರತ್ನ ತಲೆಗೆ ಮೊಟ್ಟೆ ಒಡೆಯಲಾಗಿದ್ದು, ತಮ್ಮ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವ ಕುರಿತು ಮುನಿರತ್ನ ಆರೋಪ ಮಾಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ನಂದಿನಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೊಟ್ಟೆ ಎಸೆತ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಗೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ, ಕುಸುಮಾ ಅವರೇ ಕಾರಣ ಎಂದು ಮುನಿರತ್ನ ಆರೋಪ ಮಾಡಿದ್ದು, ನನ್ನ ಶರ್ಟ್ ಹರಿದರೆ 20 ಲಕ್ಷ ರೂ, ಮಸಿ ಬಳಿದರೆ 10 ಲಕ್ಷ ರೂ, ಹೀಗೆ ಒಂದೊಂದು ರೇಟ್ ಫಿಕ್ಸ್ ಮಾಡಿರುವ ಕುರಿತು ಆರೋಪವನ್ನು ಮಾಡಿದ್ದಾರೆ ಮುನಿರತ್ನ.