Udupi: ಮಾ.8ರಂದು ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕಾ ಅದಾಲತ್!

Udupi: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ (Udupi) , ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಮಾ.8ರಂದು ರಾಷ್ಟ್ರೀಯ ಲೋಕಾ ಅದಾಲತ್‌ನ್ನು ಆಯೋಜಿಸಲಾಗಿದೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದ್ದಾರೆ.

ಉಡುಪಿ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಕರೆಯಲಾದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕಿರಣ್ ಎಸ್.ಗಂಗಣ್ಣನವರ್ ಅವರು, 2024ರಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆದ ನಾಲ್ಕು ಲೋಕಾ ಅದಾಲತ್‌ನಲ್ಲಿ ರಾಜೀಯಾಗಬಲ್ಲ 12966 ಅಪರಾಧಿಕ ಪ್ರಕರಣಗಳು ಹಾಗೂ 1,92,976 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 2,05,942 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.
ಪ್ರಸ್ತುತ ಜಿಲ್ಲೆಯ ನ್ಯಾಯಾಲಯಗಳಲ್ಲಿ 15674 ಸಿವಿಲ್ ದಾವೆಗಳು ಹಾಗೂ 18734 ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ ಇತ್ಯರ್ಥ ಪಡಿಸಬಹುದಾದ 3442 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಬಾರಿಯ ಅದಾಲತ್‌ನಲ್ಲಿ 1179 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸುವ ನಿರೀಕ್ಷೆ ಇದೆ. ಅದೇ ರೀತಿ 3300 ವ್ಯಾಜ್ಯ ಪೂರ್ವ ಪ್ರಕರಣ ಗಳು ಈ ಬಾರಿಯ ಅದಾಲತ್‌ನಲ್ಲಿವೆ ಎಂದು ಅವರು ಹೇಳಿದರು.
ಇತ್ಯರ್ಥಗೊಳಿಸುವ ಪ್ರಕರಣಗಳು: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂಎಂಡಿಆರ್, ಚೆಕ್ ಅಮಾನ್ಯ, ಬ್ಯಾಂಕ್/ಸಾಲದ ವಸೂಲಾತಿ, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗ ದಲ್ಲಿ ಪುನರ್ ಸ್ಥಾಪಿಸಲ್ಪಡುವ ಸೇರಿದಂತೆ ಕಾರ್ಮಿಕ ವಿವಾದಗಳು, ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯಗಳ ಪ್ರಕರಣ ಗಳು, ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಕೂಡ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿ ಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (0820-2523355) ಇವರನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
Comments are closed.