Dakshina Kannada: ದಕ್ಷಿಣ ಕನ್ನಡದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳ ದುರಸ್ತಿಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ!

Dakshina Kannada: ಜಯಂತ್ ಚೌಧರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ ಅಡಿ 2023-24 ರಿಂದ 2024-25 ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿಗೆ 290ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ತುರ್ತಾಗಿ ಕೇಂದ್ರ ಸರ್ಕಾರದ ನೆರವು ಕೋರಿದ್ದರು. ದಕ್ಷಿಣ ಕನ್ನಡವು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಂಡಿರುವ ಶಾಲೆಗಳ ರಿಪೇರಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಏನೆಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ಕೋರಿದ್ದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಕೇಳಿದ್ದ ಈ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ ಕಾರ್ಯ ನಡೆಯುತ್ತಿದೆ. ಪ್ರಬಂಧ ಪೋರ್ಟಲ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಯೋಜನೆಯಡಿ ಕಳೆದ ಎರಡು ಸಾಲಿನಲ್ಲಿ 11 ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ದುರಸ್ತಿಗೊಳಿಸಲು ಅನುಮೋದನೆ ನೀಡಲಾಗಿದೆ. ಕೇಂದ್ರದ ಈ ಸಮಗ್ರ ಶಿಕ್ಷಾ ಯೋಜನೆಯು ರಿಪೇರಿಗೆ ಕಾಯುತ್ತಿರುವ ಶಾಲೆಗಳನ್ನು ಆದ್ಯತೆ ಮೇರೆಗೆ ದುರಸ್ತಿಗೊಳಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಆ ಮೂಲಕ, ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾಗುವ ಶಾಲೆಗಳನ್ನು ಯಥಾಸ್ಥಿತಿಗೆ ತರುವುದಕ್ಕೆ ಕೇಂದ್ರ ಸರ್ಕಾರದ ಸೂಕ್ತ ಆರ್ಥಿಕ ನೆರವು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಆರಂಭಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳ ದುರಸ್ತಿಗೆ ಅನುಮೋದನೆ ಸಿಕ್ಕಿದೆ. ಮುಂದೆ ಮಳೆಯಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡದ 290 ಶಾಲೆಗಳ ದುರಸ್ತಿ ಕಾರ್ಯಕ್ಕೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: MRI scan: ಆಭರಣ ಧರಿಸಿ ಸ್ಕ್ಯಾನಿಂಗ್: ಎಂಆರ್ಐ ಯಂತ್ರದೊಳಗೆ ಸಿಲುಕಿ ವ್ಯಕ್ತಿ ಸಾವು!
Comments are closed.