ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ನಂತರದ ಹಿಂಸಾಚಾರ | ಸರ್ಕಾರಕ್ಕೆ ನೋಟಿಸ್ ನೀಡಿದ ಗೃಹ ಸಚಿವಾಲಯ
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಸಂದರ್ಭದಲ್ಲಿ ವಿರೋಧ ಪಕ್ಷಗಳ ಕಾರ್ಯಕರ್ತರ ಮೇಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣ ವರದಿ ನೀಡಬೇಕೆಂದು ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
ರಾಜ್ಯದ 292 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟಿಸುವ ದಿನದಿಂದ ಬಿಜೆಪಿ ಸೇರಿದಂತೆ ವಿರೋಧ ಪಕ್ಷದ ಕಾರ್ಯಕರ್ತರನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು.ನಾಯಕರು ವಿರೋಧಿಗಳಂತೆ ನೋಡುತ್ತ ಶುರುವಾದ ಹಿಂಸಾಚಾರ ಸಾಗಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರದಲ್ಲಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದೆ ಎಂದು ಕೇಂದ್ರದ ವಕ್ತಾರರೊಬ್ಬರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಹೂಗ್ಲಿ ಜಿಲ್ಲೆಯಲ್ಲಿ ಇರುವ ಬಿಜೆಪಿ ಕಚೇರಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿ ಬೆಂಕಿ ಹಚ್ಚಿದ್ದರು. ಅಲ್ಲದೇ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸೇರಿದಂತೆ ವಿವಿಧ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಟಿಎಂಸಿ ಬೆಂಬಲಿಗರು ಮತ್ತು ಕಾರ್ಯಕರ್ತರು ಪ್ರಚೋದನೆಗೆ ಪ್ರತಿಕ್ರಿಯೆ ನೀಡದೇ ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ.
ನಂದಿಗ್ರಾಮ್ ವಿಧಾನಸಭೆ ಕ್ಷೇತ್ರದಲ್ಲಿ ಶಿಷ್ಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಅನುಭವಿಸಿದರೂ ಕೂಡಾ ಮಮತಾ ಬ್ಯಾನರ್ಜಿ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೇರುವ ಅವಕಾಶ ಒದಗಿ ಬಂದಿದೆ. ರಾಜ್ಯದಲ್ಲಿ ನಡೆದ 294 ವಿಧಾನಸಭೆ ಕ್ಷೇತ್ರಗಳ ಪೈಕಿ 213 ಕಡೆಗಳಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ. ದೀದಿ ವಿರುದ್ಧ ಸಮರ ಸಾರಿದ್ದ ಬಿಜೆಪಿ ಮೊದಲ ಬಾರಿಗೆ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.