Kodagu DDPI: ಕೊಡಗು ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಪ್ರಯತ್ನ – ಡಿಡಿಪಿಐ ಬಸವರಾಜು

Share the Article

Kodagu DDPI: ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕರಾಗಿ (DDPI) ಬಸವರಾಜು ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ಇದೀಗ ಬೇರೆಡೆಗೆ ವರ್ಗಾವಣೆಗೊಂಡಿರುವ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ ಕಾರ್ಯಕ್ರಮಗಳು/ ಚಟುವಟಿಕೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಜಿಲ್ಲೆಯಲ್ಲಿ ಉತ್ತಮವಾಗಿ ಶೈಕ್ಷಣಿಕ ಸಾಧನೆಗೆ ಒತ್ತು ನೀಡಲಾಗುವುದು ಎಂದರು.

ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗಳಿಸುತ್ತಾ ಬಂದಿದ್ದು, ಕಳೆದ ಸಲ ಕೂಡ 4ನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಕೂಡ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪ್ರಯತ್ನಿಸಲಾಗುವುದು ಎಂದು ನೂತನ ಡಿಡಿಪಿಐ ಬಸವರಾಜು ತಿಳಿಸಿದರು.

ಕೊಡಗು ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದೆ. ಜಿಲ್ಲೆಯಲ್ಲಿ ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು ಎಂದು‌ ತಿಳಿಸಿದರು.

ನೂತನ ಡಿಡಿಪಿಐ ಬಸವರಾಜು ಅವರನ್ನು ಕಛೇರಿಯಲ್ಲಿ ಸ್ವಾಗತಿಸಿ ಅಭಿನಂದಿಸಿ ನಂತರ ಅಧಿಕಾರ ಹಸ್ತಾಂತರ ಮಾಡಿದ ನಿರ್ಗಮಿತ ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಲು ಸಾಧ್ಯವಾಗಿದೆ. ಈ ಸಾಲಿನಲ್ಲೂ ಕೂಡ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ನಿರಂತರ ಪ್ರಯತ್ನ ನಡೆಸಬೇಕಿದೆ ಎಂದರು.

ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶುಪಾಲರಾದ ಡಿ.ಉದಯ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಎಲ್ಲರೂ ಒಗ್ಗೂಡಿ ಶ್ರಮಿಸಿದರೆ ಉತ್ತಮ ಸಾಧನೆ ಪಡೆಯಲು ಸಾಧ್ಯ ಎಂದರು.

ಡಿವೈಪಿಸಿಗಳಾದ ಎಂ.ಕೃಷ್ಣಪ್ಪ, ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಕಛೇರಿಯ ಪತ್ರಾಂಕಿತ ಅಧಿಕಾರಿ ಪಿ.ಎಸ್. ನಟರಾಜ್, ನಿವೃತ್ತ ಶಿಕ್ಷಣಾಧಿಕಾರಿಗಳಾದ ಎಂ.ಮಹಾದೇವಸ್ವಾಮಿ, ಶಿವಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ಪಿ.ಗುರುರಾಜ್, ಕಛೇರಿಗೆ ನೂತನವಾಗಿ ಆಗಮಿಸಿದ ವೃತ್ತಿ ಶಿಕ್ಷಣ ವಿಭಾಗದ ಪರಿವೀಕ್ಷಕಿ ಶರ್ಮಿಳಾ, ಕಛೇರಿಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಹಾಜರಿದ್ದರು. ನೂತನ ಡಿಡಿಪಿಐ ‌ಬಸವರಾಜು ಅವರನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ನಂತರ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ನೂತನ ಡಿಡಿಪಿಐ ಬಸವರಾಜು ಅವರನ್ನು ಸ್ವಾಗತಿಸಿದರು. ಇದಕ್ಕೂ ಮೊದಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಮತ್ತು ಪದಾಧಿಕಾರಿಗಳು ನೂತನ ಡಿಡಿಪಿಐ ಬಸವರಾಜು ಅವರನ್ನು ಅಭಿನಂದಿಸಿದರು.

Life style: ಮಲಗುವ ಮುನ್ನ ಮೊಬೈಲ್ ಬಳಕೆ ಮಾಡ್ತೀರಾ?

Comments are closed.