ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ ಅಡುಗೆ ಅನಿಲ (LPG) ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮೂಡಬಿದಿರೆ ಸಮೀಪ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಆರು ವರ್ಷದ ಪುತ್ರ ಆದರ್ಶ್ (6) ಗಾಯಗೊಂಡ ದುರ್ದೈವಿಗಳು.
ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಅವರ ಪತ್ನಿ ಹಾಗೂ ಪುತ್ರನಿಗೂ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿರುವುದು ಘಟನೆಗೆ ಕಾರಣ ಎನ್ನಲಾಗಿದ್ದು, ಸೋರಿಕೆಯಾದ ಅನಿಲಕ್ಕೆ ಬೆಂಕಿ ತಗುಲಿದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅನಿಲ ಸೋರಿಕೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




