ನಕಲಿ ಅಥವಾ ವಿಷಕಾರಿ ಮದ್ಯ ಸೇವನೆಯ ಶಂಕಿತ ಪ್ರಕರಣದಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.


ಘೂಘರ್, ನೌರಾಜ್, ಬರಾಜ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ನಿನ್ನೆ ರಾತ್ರಿ ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತಪಟ್ಟವರಲ್ಲಿ ಹಲವರು ಒಂದೇ ಅವಧಿಯಲ್ಲಿ ಮದ್ಯ ಸೇವಿಸಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆದರೆ ಮದ್ಯ ಸೇವನೆಯೇ ಸಾವಿಗೆ ನೇರ ಕಾರಣ ಎಂಬುದು ಈವರೆಗೆ ಅಧಿಕೃತವಾಗಿ ದೃಢಪಟ್ಟಿಲ್ಲ. ತನಿಖಾಧಿಕಾರಿಗಳು ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದು, ಮೃತರು ಸೇವಿಸಿದ್ದ ಮದ್ಯದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಸಾಧ್ಯತೆಯಿದೆ. ಇದರ ಮೂಲಕ ಮದ್ಯದ ಮೂಲ, ತಯಾರಿಕೆ ಹಾಗೂ ವಿತರಣೆಯ ಸರಪಳಿಯನ್ನು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ.
ಘಟನೆಯ ಹಿಂದೆ ಅಕ್ರಮವಾಗಿ ತಯಾರಿಸಲಾದ ಅಥವಾ ನಕಲಿ ಮದ್ಯದ ಜಾಲವಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

