ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆರೋಪಗಳನ್ನು ಮುಂದಿಟ್ಟು ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ಕೊಪ್ಪಳ ಜಿಲ್ಲೆಯ ಕಾರಟಗಿವರೆಗೆ ಸುಮಾರು 26 ಕಿ.ಮೀ ಪಾದಯಾತ್ರೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸುನಿಲ್ ಕುಮಾರ್, ಮಹೇಶ್ ತೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಪಾದಯಾತ್ರೆ ಆರಂಭವಾಗಿದ್ದು, ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗೋಪೂಜೆ ನೆರವೇರಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಸ್ತುವಾರಿಯಲ್ಲಿ ಇಂದಿನ ಪಾದಯಾತ್ರೆ ನಡೆಯುತ್ತಿದೆ.
ಸರ್ಕಾರದ ವಿರುದ್ಧ ಆಕ್ರೋಶ
ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಯೋಜನೆಗಳ ಹಣ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವ ವಿಚಾರವನ್ನೂ ಪಾದಯಾತ್ರೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಮಧ್ಯಾಹ್ನ 2 ಗಂಟೆಗೆ ಹಂಚಿನಾಳ ಕ್ಯಾಂಪ್ ಬಳಿ ಭೋಜನ ವಿರಾಮದ ವ್ಯವಸ್ಥೆ ಮಾಡಲಾಗಿದೆ. ಸಿಂಧನೂರು, ವಿಜಯನಗರ, ಗದಗ, ಕನಕಗಿರಿ, ಹಾವೇರಿ, ಹುಬ್ಬಳ್ಳಿ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಇಂದು ನಡೆಯಲಿರುವ ಬೃಹತ್ ಬಹಿರಂಗ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಮಾತನಾಡಲಿದ್ದಾರೆ.



