ಬೆಂಗಳೂರು: ನಗರದ ವೈಟ್‌ಫೀಲ್ಡ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಒಂದೇ ಕೋ-ಲಿವಿಂಗ್ ಪಿಜಿಯಲ್ಲಿ ವಾಸಿಸುತ್ತಿದ್ದ ಪ್ರೇಮಿಗಳಿಬ್ಬರು ಕಟ್ಟಡದ 7ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತ ಯುವತಿಯನ್ನು ಪುದುಚೇರಿ ಮೂಲದ ಜನನಿ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಮಾಣಿಕ್ಯ ವೇಲು ಎಂದು ತಿಳಿದುಬಂದಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರೂ ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಕಳೆದ ಒಂದು ತಿಂಗಳಿನಿಂದ ವೈಟ್‌ಫೀಲ್ಡ್‌ನಲ್ಲಿರುವ ಒಂದೇ ಕೋ-ಲಿವಿಂಗ್ ಪಿಜಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಭಾನುವಾರ ಏಕಾಏಕಿ ಇಬ್ಬರೂ ಕಟ್ಟಡದ 7ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ವೈಟ್‌ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಕಟ್ಟಡದಿಂದ ಕೆಳಗೆ ಬಿದ್ದಿರುವುದಕ್ಕೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ



