

Karkala: ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ.
ಎರಡು ವರ್ಷದಲ್ಲಿ 730 ಬಾಣಂತಿಯರ ಸಾವು, 1100 ಕ್ಕೂ ಅಧಿಕ ರೈತರ ಆತ್ಮಹತ್ಯೆ ನಡೆದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಈ ದುರಾಡಳಿತದ ವಿರುದ್ಧ, ಸರ್ಕಾರದ ತಾರತಮ್ಯ ನೀತಿ, ಭ್ರಷ್ಟಾಚಾರ, ಬೆಲೆ ಏರಿಕೆ ಖಂಡಿಸಿ,
ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 10 ರಂದು ಬೃಹತ್ ಜನಾಕ್ರೋಶ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯು ಶಾಸಕ ವಿ ಸುನಿಲ್ ಕುಮಾರ್ ಮಾರ್ಗದರ್ಶನದಲ್ಲಿ ಕ್ಷೇತ್ರದ ವಿವಿಧ ಸ್ತರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ.
ಕಾರ್ಕಳ (Karkala) ಕ್ಷೇತ್ರದಿಂದ 2000 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದು ಹೆಬ್ರಿ, ಬೆಳ್ಮಣ್ ಹಾಗೂ ಕಾರ್ಕಳ ನಗರ ಮಹಾ ಶಕ್ತಿಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಯಿತು.
ಪ್ರತಿ ಬೂತ್ ನಿಂದ ಕನಿಷ್ಠ 15 ಜನ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮನವಿ ಮಾಡಿದ್ದಾರೆ, ಅಲ್ಲದೆ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ದುರ್ಬಳಕೆ ಕುರಿತು ಜನರ ಪರವಾಗಿ ನಾವು ಧ್ವನಿ ಎತ್ತಲಿದ್ದೇವೆ ಎಂದಿದ್ದಾರೆ.













