ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ.
ಕಳೆದ ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಜನಗಣಮನ ಅಧಿನಾಯಕ ರಾಷ್ಟ್ರಗೀತೆಗೆ ಸಮನಾಗಿ ‘ವಂದೇ ಮಾತರಂ’ ಗೀತೆಯನ್ನು ರಾಷ್ಟ್ರೀಯ ಗೀತೆಯನ್ನಾಗಿ ಘೋಷಿಸಿ ಮಸೂದೆಯನ್ನು ಮಂಡಿಸಿತ್ತು. ಇದರ ಪ್ರಕಾರ ವಂದೇ ಮಾತರಂನ ಸಂಪೂರ್ಣ ಚರಣಗಳನ್ನು ದೇಶದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಹಬ್ಬಗಳಲ್ಲಿ ಹಾಡಬೇಕೆಂದು ಆದೇಶಿಸಿತ್ತು. ಇದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೆ ಇದೀಗ ಕರ್ನಾಟಕ ಸರ್ಕಾರವು ರಾಜ್ಯದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಅಧಿಕೃತ ಆದೇಶ ಹೊರಡಿಸಿದೆ.
ಕಾರ್ಯಕ್ರಮಗಳ ಸ್ವರೂಪಕ್ಕೆ ತಕ್ಕಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಈ ಕ್ರಮ ಜರುಗಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ತಿಳಿಸಿದೆ. ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ವಿಶೇಷ ಮತ್ತು ಉನ್ನತ ಮಟ್ಟದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದಂತೆ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.




