ಬೆಂಗಳೂರು: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದ ಜವಾಬ್ದಾರಿಯಿಂದ ತಮ್ಮನ್ನು ವಿನಾಯಿತಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
Sponsored
ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಧಾನಸಭಾ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ಚಟುವಟಿಕೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ನಿರ್ವಹಿಸಲು ಸಮಯದ ಅಭಾವ ಉಂಟಾಗಲಿದೆ ಎಂದು ಜಮೀರ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕಾರಣದಿಂದ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ತಮಗೆ ನೀಡದಂತೆ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ, ಆಗಸ್ಟ್ 15ರಂದು ವಿಜಯನಗರದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೂ ತಾವು ಹಾಜರಾಗಲು ಸಾಧ್ಯವಾಗದ ಕಾರಣ, ಆ ಜವಾಬ್ದಾರಿಯಿಂದಲೂ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಈಗಾಗಲೇ ಪೂರ್ಣಗೊಳಿಸಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಮೀರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಮೀರ್ ಅವರ ಮನವಿಯನ್ನು ಮುಖ್ಯಮಂತ್ರಿ ಪುರಸ್ಕರಿಸಿದ್ದು, ಅವರ ಬದಲಿಗೆ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಬಸವಂತಪ್ಪ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಜವಾಬ್ದಾರಿ ವಹಿಸಲಾಗಿದೆ.




