ಮಹಿಳೆಯ ಮೇಲೆ ಆಯಸಿಡ್ ದಾಳಿ ನಡೆಸಿದ ಗಂಭೀರ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3.05 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಕಡಬ ಕೊಡಿಂಬಾಳ ನಿವಾಸಿ ಜಯಾನಂದ ಕೆ. ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಈ ಸಂಬಂಧ 2020ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ (ಅ.ಕ್ರ. 06/2020) ಭಾರತೀಯ ದಂಡ ಸಂಹಿತೆಯ (IPC) ವಿವಿಧ ಗಂಭೀರ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಆಗಿನ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಸುಮಧರ ಅವರು ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದರು.
ಸದ್ಯ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಐಪಿಸಿ ಕಲಂ 326A ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹3,00,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 2 ವರ್ಷ ಸರಳ ಜೈಲು ಶಿಕ್ಷೆ.ಐಪಿಸಿ ಕಲಂ 504ರ ಅಡಿಯಲ್ಲಿ1 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ
ಮಹಿಳೆಯರ ಮೇಲಿನ ಆಯಸಿಡ್ ದಾಳಿಯಂತಹ ಅಮಾನುಷ ಕೃತ್ಯಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಈ ತೀರ್ಪು ಸಮಾಜಕ್ಕೆ ಪ್ರಮುಖ ಸಂದೇಶ ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.



