ಶನಿವಾರ, 24 ಅಕ್ಟೋಬರ್ 2026

ಮಂಗಳೂರು: ಮಳೆಗೆ ಕುಸಿದ ಮೇಲ್ಛಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು

ಮಂಗಳೂರು, ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ನಡೆದಿದೆ. ಹಳೆಯ ಹಂಚಿನ ಮನೆಯೊಂದರ ಮೇಲ್ಛಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಒಬ್ಬ ಮಹಿಳೆ, ಇಬ್ಬರು ಬಾಲಕಿಯರು ಮೃತರಾಗಿದ್ದಾರೆ.

ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮೇಲ್ಛಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ್ದಾರೆ. ಮನೆಯ ಗೋಡೆಗಳು ಹಳೆಯದಾಗಿದ್ದರಿಂದ ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಕಂಕನಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.