Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ದಾಂಧಲೆ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ದಾಂಧಲೆ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

0 comments

ಕಲಬುರಗಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ಮೇಲೆ ಕೈದಿಗಳು ಹಲ್ಲೆ ನಡೆಸಿದ ಆರೋಪದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹಲ್ಲೆಗೆ ಕಾರಣವೇನು ಎಂಬುದನ್ನು ಪರಿಶೀಲಿಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಜೈಲಿನಲ್ಲಿರುವ ಕೈದಿಗಳಿಗೆ ನಿಯಮಿತವಾಗಿ ಕೌನ್ಸೆಲಿಂಗ್ ನೀಡಲಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಕೈದಿಗಳ ಮಾನಸಿಕ ಸ್ಥಿತಿಯಲ್ಲಿ ಏರುಪೇರು ಉಂಟಾಗುವುದರಿಂದ ಸಂಘರ್ಷ ಅಥವಾ ಹಲ್ಲೆಯಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಾಗಲೂ ಕೆಲ ಕೈದಿಗಳು ಆಕ್ರೋಶ ವ್ಯಕ್ತಪಡಿಸಬಹುದು ಎಂದು ಹೇಳಿದರು.

ಜೈಲುಗಳಲ್ಲಿ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿನ ಪರಿಸ್ಥಿತಿಯ ಮೇಲೂ ಗಮನ ಹರಿಸಲಾಗುತ್ತಿದೆ ಎಂದರು.

ಇದೇ ವೇಳೆ ಬಿಜೆಪಿ ನಾಯಕ ಶ್ರೀರಾಮುಲು ಅವರ ಹೇಳಿಕೆಗಳಿಗೂ ತಿರುಗೇಟು ನೀಡಿದ ಸಚಿವರು, “ನಾನು ಜೈಲಿಗೆ ಹೋಗುತ್ತೇನೆ ಎಂದು ರಾಮುಲು ಹೇಳುತ್ತಿದ್ದಾರೆ. ಜೈಲಿಗೆ ಹೋಗಿ ಬಂದವರು ನಮ್ಮನ್ನು ಜೈಲಿಗೆ ಕಳುಹಿಸುತ್ತಾರೆಯೇ?” ಎಂದು ಪ್ರಶ್ನಿಸಿದರು. ಮೊದಲು ಅವರು ಕನ್ನಡವನ್ನು ಸರಿಯಾಗಿ ಮಾತನಾಡುವುದನ್ನು ಕಲಿಯಲಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಬರ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳು ಮತ್ತು ಮಾನದಂಡಗಳ ಆಧಾರದಲ್ಲೇ ಬರ ಘೋಷಣೆ ಮಾಡಬೇಕಾಗುತ್ತದೆ. ಆದರೆ ಈ ವಿಚಾರವನ್ನು ಮುಂದಿಟ್ಟುಕೊಂಡು ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆಯ ಹೆಸರಿನಲ್ಲಿ ಗುಂಡಾಗಿರಿ ನಡೆಸುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.

You may also like