ಬೆಂಗಳೂರು:‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವ ಕಾಂಗ್ರೆಸ್ ನಿರ್ಧಾರದ ಕುರಿತು ನಡೆಯುತ್ತಿರುವ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಿ ತೋರಿಸಿದರೆ ತಾವು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
1937ರಲ್ಲೇ ‘ವಂದೇ ಮಾತರಂ’ ಗೀತೆಯ ಬಳಕೆಗೆ ಸಂಬಂಧಿಸಿದಂತೆ ಪ್ರಮುಖ ನಾಯಕರು ನಿರ್ಧಾರ ಕೈಗೊಂಡಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ಹಲವು ನಾಯಕರು ಚರ್ಚಿಸಿ ಎರಡು ಚರಣಗಳನ್ನು ಹಾಡುವ ನಿರ್ಧಾರಕ್ಕೆ ಬಂದಿದ್ದರು. ಅದನ್ನೇ ಕಾಂಗ್ರೆಸ್ ಪಾಲಿಸಿಕೊಂಡು ಬರುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಇದೀಗ ‘ವಂದೇ ಮಾತರಂ’ ವಿಚಾರದಲ್ಲಿ ಬಿಜೆಪಿ ನಾಯಕರು ದೇಶಪ್ರೇಮದ ಬಗ್ಗೆ ಮಾತನಾಡುತ್ತಿರುವುದನ್ನು ಪ್ರಶ್ನಿಸಿದ ಅವರು, ಗೀತೆಯನ್ನು ಸಂಪೂರ್ಣವಾಗಿ ಹಾಡುವಂತೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.
“ಮೊದಲು ಕನಿಷ್ಠ ಎರಡು ಚರಣಗಳನ್ನಾದರೂ ಸಂಪೂರ್ಣವಾಗಿ ಹಾಡಿ ತೋರಿಸಲಿ. ಅವರಿಗೆ ಪೂರ್ಣ ಗೀತೆ ಹಾಡಲು ಬರುತ್ತದೆಯೇ ಎಂಬುದನ್ನು ನೋಡೋಣ” ಎಂದು ಅವರು ವ್ಯಂಗ್ಯವಾಡಿದರು. ವಂದೇ ಮಾತರಂ ಗೀತೆಯ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ




