ರಾಜ್ಯದಲ್ಲಿ ಎರಡು ಸಾವಿರ ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಗಳಿಗಾಗಿ ಒಂದು ಸಾವಿರ ಪ್ರಾಧ್ಯಾಪಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶೀಘ್ರವೇ 3000 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕ ಪ್ರಾಧ್ಯಾಪಕರ 3 ಸಾವಿರ ಹಾಗೂ ವಿವಿಗಳಲ್ಲಿ ಪ್ರಾಧ್ಯಾಪಕರ 1 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಉನ್ನತ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ತಾಂತ್ರಿಕ ಕೌಶಲ್ಯ ಹೊಂದಿರುವ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.



