ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ ಹಾಗೂ ಜಾರಿ ನಿರ್ದೇಶನಾಲಯದ (ED) ತನಿಖೆಯ ನಡುವೆಯೇ, ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 10ರಂದು ಆದೇಶ ಹೊರಡಿಸಿದ್ದರು. ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ (High Court) ಏಕಸದಸ್ಯ ಪೀಠ ರದ್ದುಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ನಿಯಮಾವಳಿಗಳ ಉಲ್ಲಂಘನೆಯಾಗಿದೆ. ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಯಾವುದೇ ಸಲಹೆ ಅಥವಾ ಶಿಫಾರಸು ಮಾಡಿರಲಿಲ್ಲ. ಸಂವಿಧಾನಬದ್ಧವಾಗಿ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕಿರುತ್ತದೆ. ಆದರೆ ಈ ಪ್ರಕ್ರಿಯೆಯನ್ನು ಉಲ್ಲಂಘಿಸಿ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಅಲ್ಲದೆ ಅಲ್ಲದೇ ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗೊಳಿಸಿದ್ದು, 7 ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡುವಂತೆ ಸೂಚಿಸಿದೆ.




