ನಟಿ ತ್ರಿಷಾ ವಿರುದ್ದ ವೇದಿಕೆಯೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ವೇದಿಕೆಯೊಂದರಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದಾಗ ಯಾರೋ ತ್ರಿಷಾ ತ್ರಿಷಾ ಎಂದು ಕೂಗಿದ್ದರು. ಈ ವೇಳೆ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ಎರಡು ಅರ್ಥ ಬರುವ ರೀತಿಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಟಿವಿಕೆ ಪಕ್ಷ ಈ ವಿಚಾರವಾಗಿ ಮಹಿಳಾ ಆಯೋಗಕ್ಕೆ ದೂರ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಉದಯ ನಿಧಿ ಸ್ಟಾಲಿನ್ ಅವರನ್ನು ಅವರ ಮನೆಯಲ್ಲೇ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಏನಿದು ವಿವಾದ?
ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ ʼತ್ರಿಷಾ… ತ್ರಿಷಾ…ʼ ಎಂಬ ಘೋಷಣೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ




